ಪಾಂಡವಪುರ ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರು ಘಟಕ ಕಾಮಗಾರಿಗೆ ಚಾಲನೆ


ಪಾಂಡವಪುರ: ತಾಲೂಕಿನ ಜಕ್ಕನಹಳ್ಳಿ ಮತ್ತು ಎಲೆಕೆರೆ ಹ್ಯಾಂಡ್‍ಪೋಸ್ಟ್ ನಲ್ಲಿ ಶೀಘ್ರದಲ್ಲೆ ನೂತನ ಕೆಎಸ್‍ಆರ್ ಟಿಸಿ ಬಸ್‍ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ರಾಜ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಉಮಾಶಂಕರ್ ತಿಳಿಸಿದರು.

ಪಾಂಡವಪುರ ಕೆಎಸ್‍ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಬಿಪಿಸಿಎಲ್ ಸಂಸ್ಥೆಯ ಸಹಯೋಗದೊಂದಿಗೆ 5 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಘಟಕ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಜಕ್ಕನಹಳ್ಳಿ ಮತ್ತು ಎಲೆಕೆರೆ ಹ್ಯಾಂಡ್ ಪೋಸ್ಟ್ ನಲ್ಲಿ ಬಸ್ ನಿಲ್ದಾಣ ನಿರ್ಮಿಸಿಕೊಡುವಂತೆ ದಿ. ಕೆ.ಎಸ್.ಪುಟ್ಟಣ್ಣಯ್ಯ ಕೋರಿದ್ದರು, ಅವರ ಕೋರಿಕೆ ಮೆರೆಗೆ 1.5 ಕೋಟಿ ರೂ ವೆಚ್ಚದಲ್ಲಿ ಜಕ್ಕನಹಳ್ಳಿಯಲ್ಲಿ ಬಸ್ ನಿಲ್ದಾಣ ಕಾಮಗಾರಿಗೆ ಮಂಜೂರಾತಿ ಮಾಡಲಾಗಿತ್ತು ದುರದೃಷ್ಟವಶಾತ್ ಅವರು ನಿಧನರಾಗಿದ್ದು ದುರ್ದೈವ, ಏಪ್ರಿಲ್ ತಿಂಗಳಲ್ಲಿ ಎಲೆಕೆರೆ ಹ್ಯಾಂಡ್‍ಪೋಸ್ಟ್‍ನಲ್ಲೂ ನೂತನ ಬಸ್ ನಿಲ್ದಾಣಕ್ಕೆ ಚಾಲನೆ ನೀಡಲಾಗುತ್ತದೆ ಎಂದರು.

ರಾಜ್ಯ ಸಾರಿಗೆ ಸಂಸ್ಥೆಯಲ್ಲಿ ಪ್ರತಿನಿತ್ಯ 27 ಲಕ್ಷ ಪ್ರಯಾಣಿಕರು ಸಂಚಾರ ಮಾಡುತ್ತಾರೆ. ಅವರಿಗೆ ಬಸ್ ನಿಲ್ದಾಣಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಸಂಸ್ಥೆ ನಿರ್ಧರಿಸಿದೆ, ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಸಂಸ್ಥೆಯ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ರಾಜ್ಯದಲ್ಲಿ 15 ಬಸ್ ನಿಲ್ದಾಣಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಘಟಕಗಳು ಈಗ ಪ್ರಾರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲೂ ಶುದ್ಧ ಕುಡಿಯುವ ನೀರು ಘಟಕಗಳನ್ನು ಪ್ರಾರಂಭಿಸುತ್ತೇವೆ ಎಂದರು.

ಕೆಎಸ್‍ಆರ್‍ಟಿಸಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ:

ಈಗಾಗಲೇ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾರಿಗೆ ಸಂಸ್ಥೆ ಎಂದು ಕೆಎಸ್‍ಆರ್ ಟಿಸಿ ಸಂಸ್ಥೆಗೆ 212ಕ್ಕೂ ಹೆಚ್ಚು ಪ್ರಶಸ್ತಿಗಳು ದೊರಕಿವೆ. ಈಗ ಮತ್ತೊಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ದ್ವೀತಿಯ ಸ್ಥಾನ ಲಭಿಸಿದೆ, ಜತೆಗೆ ರಾಷ್ಟ್ರೀಯ ಸಾರಿಗೆ ಸಂಸ್ಥೆಗಳ ಒಕ್ಕೂಟದಿಂದ ಉಪಾಧ್ಯಕ್ಷ ಸ್ಥಾನ ಲಭಿಸಿದೆ ಎಂದರು.

ರಾಜ್ಯ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿರುವ ಶೌಚಾಲಯಗಳ ನಿರ್ವಹಣೆಯನ್ನು ಸುಲಭ್ ಇಂಟರ್ ನ್ಯಾಷನಲ್ ಸಂಸ್ಥೆಗೆ ವಹಿಸಲಾಗಿದೆ. ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಚಾಲನೆ ನೀಡಿ ಬಳಿಕ ಎಲ್ಲಾ ನಿಲ್ದಾಣಗಳ ಶೌಚಾಲಯಗಳ ನಿರ್ವಹಣೆ ನೀಡಲಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಅವರು ತಾವು ವ್ಯಾಸಂಗ ಮಾಡಿದ ಫ್ರೆಂಚ್‍ರಾಕ್ಸ್ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.

ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್‍ನ ಕಾರ್ಯನಿರ್ವಾಹಕ ನಿರ್ದೇಶಕ ಇ.ಎ.ವಿಮಲನಾಥನ್, ಬಿಪಿಸಿಎಲ್ ಅಧಿಕಾರಿಗಳಾದ ಸಾರಾ ಥಾಮಸ್, ಇ.ರಜಾರೊಯೋ, ಎಸ್.ಚೇನಾ, ಕೆ.ಗೋವಿಂದ್ ಮುಂತಾದವರು ಇದ್ದರು.

Leave a Reply

Your email address will not be published.