ನ. 10 ರಂದು ಟಿಪ್ಪು ಜಯಂತಿ ಆಚರಣೆ: ಅಪರ ಡಿಸಿ ಬೂದೆಪ್ಪ


ಬೆಳಗಾವಿ: ಪ್ರತಿವರ್ಷದಂತೆ ನವೆಂಬರ್ 10 ರಂದು ಟಿಪ್ಪು ಸುಲ್ತಾನ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಬೂದೆಪ್ಪ ಹೆಚ್.ಬಿ. ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಟಿಪ್ಪು ಸುಲ್ತಾನ್ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನ. 10 ರಂದು ಬೆಳಿಗ್ಗೆ 10.30 ಗಂಟೆಗೆ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆ ನೆರವೇರಿಸಲಿದ್ದಾರೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಟಿಪ್ಪು ಸುಲ್ತಾನ್ ಜೀವನಸಾಧನೆ ಕುರಿತು ವಿಶೇಷ ಉಪನ್ಯಾಸ, ಅಲ್ಪಸಂಖ್ಯಾತ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಜಯಂತಿಯ ನಿಮಿತ್ತ ನಗರದ ಪ್ರಮುಖ ವೃತ್ತಗಳನ್ನು ಮತ್ತು ರಂಗಮಂದಿರವನ್ನು ಸ್ವಚ್ಛಗೊಳಿಸಿ, ಅಲಂಕಾರ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಳೆದ ಬಾರಿಯಂತೆ ಶಾಂತಿಯುತವಾಗಿ ಮತ್ತು ಅರ್ಥಪೂರ್ಣವಾಗಿ ಜಯಂತಿ ಆಚರಿಸಲು ಸಮಾಜದ ಜನರು ಸಹಕರಿಸಬೇಕು ಎಂದು ಡಿಸಿಪಿ ಸೀಮಾ ಲಾಟ್ಕರ್ ಹೇಳಿದರು.

ಕಾರ್ಯಕ್ರಮದ ವೇಳೆ ಯಾವುದೇ ಗೊಂದಲಗಳು ಉಂಟಾಗದಂತೆ ಸಮಾಜದ ಮುಖಂಡರು ಮುಂದಾಳತ್ವ ವಹಿಸಿಕೊಂಡು ಒಟ್ಟಾರೆ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀಶೈಲ್ ಕರಿಶಂಕರಿ, ಪಾಲಿಕೆ ಆರೋಗ್ಯಾಧಿಕಾರಿ ಶಶಿಧರ್ ನಾಡಗೌಡ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗ್ದುಂ ಮತ್ತಿತರರು ಉಪಸ್ಥಿತರಿದ್ದರು. ಸಮಾಜದ ಮುಖಂಡರು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಸಲಹೆ-ಸೂಚನೆಗಳನ್ನು ನೀಡಿದರು.

Leave a Reply

Your email address will not be published.