ನೀತಿ ಸಂಹಿತೆ, ಚೆಕ್‌ಪೋಸ್ಟ್, ಕಂಟ್ರೋಲ್ ರೂಂಗಳಲ್ಲಿ ಕಟ್ಟೆಚ್ಚರವಿರಲಿ: ಸುಬೋಧ ಯಾದವ್


ಕೊಪ್ಪಳ: ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಲ್ಲಿದ್ದು, ಚೆಕ್‌ಪೋಸ್ಟ್‌ಗಳು ಹಾಗೂ ಕಂಟ್ರೋಲ್ ರೂಂಗಳಲ್ಲಿ ಕಟ್ಟೆಚ್ಚರವಿರಲಿ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್  ಅಧಿಕಾರಿಗಳಿಗೆ ಸೂಚಿಸಿದರು.

ಲೋಕಸಭಾ ಸಾರ್ವತ್ರಿಕ ಚುನಾವಣಾ ಕಾರ್ಯಕ್ರಮಗಳ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆ, ಶಂಕಾಸ್ಪದ ಸರಕು ಸಾಗಾಣಿಕೆಗಳ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಯಾವುದೇ ಅನುಮಾನವಿದ್ದಲ್ಲಿ, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು. ಯಾವುದೇ ನಿರ್ಲಕ್ಷ್ಯ ಕಂಡುಬಂದಲ್ಲಿ ಕರ್ತವ್ಯಲೋಪವೆಂದು ಪರಿಗಣಿಸಿ, ಅಂತಹವರ ವಿರುದ್ಧ ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಚುನಾವಣೆ ಕಾರ್ಯವು ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳ ಜವಾಬ್ದಾರಿಯಾಗಿದ್ದು, ಯಾವುದೇ ಇಲಾಖೆಗಳ ಜಿಲ್ಲಾ ಅಥವಾ ತಾಲೂಕು ಮಟ್ಟದ ಅಧಿಕಾರಿ ಅಥವಾ ಸಿಬ್ಬಂದಿಗಳು ರಜೆ ಮೇಲೆ ತೆರಳುವಂತಿಲ್ಲ. ಅಧಿಕಾರಿಗಳು ಅಥವಾ ಸಿಬ್ಬಂದಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ. ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವ ಸಂದರ್ಭವಿದ್ದಲ್ಲಿ ಜಿಲ್ಲಾಧಿಕಾರಿಗಳಿಂದಲೇ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಮಾತನಾಡಿ, ಲೋಕಸಭಾ ಸಾರ್ವತ್ರಿಕ ಚುನಾವಣೆ  ಹಿನ್ನಲೆ ನೀತಿ ಸಂಹಿತೆ ಜಾರಿಯಲ್ಲಿದ್ದು, ನೀತಿ ಸಂಹಿತೆ ಪಾಲನೆಗಾಗಿ ಹಾಗೂ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಂಡಿದ್ದು, ಚುನಾವಣೆಗೆ ಸಂಬಂಧಿಸಿದಂತೆ ದೂರುಗಳನ್ನು ಸ್ವೀಕರಿಸಿ, ಅವುಗಳಿಗೆ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣೆ ಸಂಬಂಧಿತ ದೂರು ಸ್ವೀಕೃತಿಗಾಗಿ ಸಹಾಯವಾಣಿ ಸ್ಥಾಪಿಸಲಾಗಿದ್ದು, “ಟೋಲ್ ಫ್ರೀ ಸಂಖ್ಯೆ. 1950” ಅನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಕೆ. ಸುಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ, ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ಅಕ್ಷಯ್ ಶ್ರೀಧರ್, ಜಂಟಿ ಕೃಷಿ ನಿರ್ದೇಶಕಿ ಶಬಾನ ಎಂ. ಶೇಖ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply

Your email address will not be published.